ವೈಕುಂಠ ಏಕಾದಶಿ ದಿನವೇ ಶಿರಸಿಯಲ್ಲಿ ದುರಂತ: ಪ್ರವಾಸಿ ಬಸ್ ಪಲ್ಟಿ, ವಿದ್ಯಾರ್ಥಿಗಳಿಗೆ ಗಾಯ!

ಕಾರವಾರ, ಉತ್ತರಕನ್ನಡ (ಡಿ.30): ವೈಕುಂಠ ಏಕಾದಶಿ ದಿನದಂದೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆಂದು ಬಂದಿದ್ದ ಕಾಲೇಜು ವಿದ್ಯಾರ್ಥಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ದಾವಣಗೆರೆಯ ಜೈನ್ ಕಾಲೇಜಿನಿಂದ ಪ್ರವಾಸಕ್ಕೆ ಬಂದಿದ್ದ ಬಸ್

ದಾವಣಗೆರೆಯ ಜೈನ್ ಪಿಯು ಕಾಲೇಜಿನ ಸುಮಾರು 50 ವಿದ್ಯಾರ್ಥಿಗಳು ಡಿಸೆಂಬರ್ 28 ರಂದು ಶೈಕ್ಷಣಿಕ ಪ್ರವಾಸಕ್ಕೆಂದು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದರು. ಇಂದು ಮುಂಜಾನೆ ಶಿರಸಿ ಮಾರಿಕಾಂಬಾ ದೇವಾಲಯದ ದರ್ಶನ ಪಡೆದಿದ್ದ ವಿದ್ಯಾರ್ಥಿಗಳು, ಅಲ್ಲಿಂದ ಯಾಣ ಹಾಗೂ ವಿಭೂತಿ ಫಾಲ್ಸ್ ವೀಕ್ಷಣೆಗೆ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮತ್ತಿಘಟ್ಟ ಹಸೆಮನೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬಸ್

ಶಿರಸಿ ತಾಲೂಕಿನ ಹಸೆಮನೆ ಗ್ರಾಮದ ಮತ್ತಿಘಟ್ಟ ಸಮೀಪದ ಅಪಾಯಕಾರಿ ತಿರುವಿನಲ್ಲಿ ಬಸ್ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆಯಲ್ಲೇ ಬಸ್ ಪಲ್ಟಿಯಾಗಿದ್ದು, ಅಪಘಾತದ ರಭಸಕ್ಕೆ ಬಸ್ಸಿನ ಗಾಜು ಸೇರಿದಂತೆ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಒಂದು ಬಸ್ ಹಾಗೂ ಒಂದು ಟಿಟಿ ವಾಹನದಲ್ಲಿ ವಿದ್ಯಾರ್ಥಿಗಳು ಪ್ರವಾಸ ಬೆಳೆಸಿದ್ದರು.

10 ರಿಂದ 12 ವಿದ್ಯಾರ್ಥಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

ಬಸ್ ಪಲ್ಟಿಯಾದ ಪರಿಣಾಮ ಸುಮಾರು 10 ರಿಂದ 12 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಎಲ್ಲರೂ ಪಾರಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಅಂಕೋಲಾ ಹಾಗೂ ಶಿರಸಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅತೀ ವೇಗ ಅಥವಾ ತಿರುವಿನಲ್ಲಿ ಚಾಲಕನ ಅಜಾಗರೂಕತೆ ಅಪಘಾತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *