ಸೋಮವಾರಪೇಟೆ: ತಾಲೂಕಿನ ಗಣಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಗಯ್ಯಪುರ ಗ್ರಾಮದಲ್ಲಿ ಇಂದು ಬೆಳಿಗ್ಗೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಕೃಷಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗ್ರಾಮದ ನಿವಾಸಿ ಪೊನ್ನಪ್ಪ (62) ಮೃತಪಟ್ಟ ದುರ್ದೈವಿ. ಇವರು ಇಂದು ಬೆಳಿಗ್ಗೆ ತಮ್ಮ ಮನೆಯ ಮುಂಭಾಗದಲ್ಲಿರುವ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ, ಪೊದೆಯಲ್ಲಿದ್ದ ಕಾಡಾನೆ ಅನಿರೀಕ್ಷಿತವಾಗಿ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಪೊನ್ನಪ್ಪ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಎ.ಸಿ.ಎಫ್ ಗೋಪಾಲ್, ಆರ್.ಎಫ್.ಒ ಶೈಲೇಂದ್ರ, ಡಿ.ಆರ್.ಎಫ್.ಒ ಶ್ರಾವಣ ಕುಮಾರ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಈರಣ್ಣ, ವೆಂಕಟೇಶ್, ಪ್ರವೀಣ್ ಕುಮಾರ್, ರಂಜಿತ್ ಮತ್ತು ವೇದಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಹಾಗೂ ವೃತ್ತ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸತತವಾಗಿ ಕಾಡಾನೆಗಳು ಗ್ರಾಮಕ್ಕೆ ನುಗ್ಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದ್ದು, ಮೃತರ ಕುಟುಂಬಕ್ಕೆ ತಕ್ಷಣದ ಪರಿಹಾರ ಹಾಗೂ ಆನೆಗಳ ಹಾವಳಿ ತಡೆಗೆ ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.







