ಹೈಕೋರ್ಟ್ ಮೆಟ್ಟಿಲೇರಿದ ಕೋಗಿಲು ಸಂಘರ್ಷ; ನ್ಯಾಯೋಚಿತ ಪರಿಹಾರ ಮತ್ತು ಪುನರ್ವಸತಿಗಾಗಿ ಸಂತ್ರಸ್ತರ ಅರ್ಜಿ.

ಬೆಂಗಳೂರು: ಯಲಹಂಕದ ಕೋಗಿಲು ಬಡಾವಣೆಯ ವಸೀಂ ಮತ್ತು ಫಕೀರ್‌ ಕಾಲೋನಿಯ 300 ಮನೆಗಳ ತೆರವು ವಿವಾದ ಹೈಕೋರ್ಟ್‌ ಮೆಟ್ಟಿಲೇರಿದ್ದು, ಸಂತ್ರಸ್ತರು ಸೂಕ್ತ ಪರಿಹಾರ ಮತ್ತು ಪುನರ್ವಸತಿ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಬಡಾವಣೆ ನಿವಾಸಿಗಳು ಮತ್ತು ಸಂತ್ರಸ್ತರಾದ ಜೈಬಾ ತಬಸ್ಸಂ, ರೆಹಾನಾ ಮತ್ತು ಆರೀಫ್‌ ಬೇಗಂ ಮತ್ತಿತರರು ಮನೆ ತೆರವುಗೊಳಿಸಿದ ಕ್ರಮ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ರಾಜ್ಯ ಸರಕಾರ, ಜಿಬಿಎ, ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಮತ್ತು ಬೆಂಗಳೂರು ಉತ್ತರ ತಾಲೂಕು ತಹಸೀಲ್ದಾರ್‌ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.

”ವಸೀಂ ಹಾಗೂ ಫಕೀರ್‌ ಕಾಲೋನಿಯಲ್ಲಿ ನಿರ್ಮಾಣವಾಗಿರುವ ಮನೆಗಳನ್ನು ಕೆಡುವುದಕ್ಕೂ ಮುನ್ನ ಯಾವುದೇ ನೋಟಿಸ್‌ ಜಾರಿ ಮಾಡಿಲ್ಲ. ನಮ್ಮ ಅಹವಾಲುಗಳನ್ನು ಆಲಿಸಿಲ್ಲ. ಬಡಾವಣೆಯಲ್ಲಿ ನೆಲೆಸಿರುವವರು ಹಲವು ಮಂದಿ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದು, ಬಹುತೇಕ ಜನರು ತಮ್ಮ ಮನೆಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಹೊಂದಿದ್ದಾರೆ. ಇನ್ನೂ ಕೆಲವರು ಹೊಂದಿಲ್ಲ. ಪಾಲಿಕೆ ಅಧಿಕಾರಿಗಳು ಅಕ್ರಮ ಒತ್ತುವರಿ ಆರೋಪದ ಮೇರೆಗೆ ಮನೆಗಳನ್ನು ತೆರವು ಮಾಡುವುದಕ್ಕೂ ಮುನ್ನ ಶೋಕಾಸ್‌ ನೋಟಿಸ್‌ ಜಾರಿ ಮಾಡಿ 15 ದಿನಗಳ ಕಾಲಾವಕಾಶ ನೀಡಬೇಕಿತ್ತು. ಆದರೆ, ನೋಟಿಸ್‌ ನೀಡಿಲ್ಲ. ಬುಲ್ಡೋಜರ್‌ ಬಳಕೆ ಮಾಡಿ ನೆಲಸಮಗೊಳಿಸಬಾರದೆಂದು ಸುಪ್ರೀಂಕೋರ್ಟ್‌ ಹೇಳಿದೆ. ಆದರೆ, ಆ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಂಡು ಮನೆಗಳನ್ನು ನೆಲಸಮಗೊಳಿಸಲಾಗಿದೆ,” ಎಂದು ಅರ್ಜಿಯಲ್ಲಿಆರೋಪಿಸಲಾಗಿದೆ.

ಸಮವಸ್ತ್ರ, ಪುಸ್ತಕ ಎಲ್ಲ ನಾಶ

‘ಅಲ್ಲದೆ, ಈ ಘಟನೆಯಿಂದ ಬಡಾವಣೆ ಸುತ್ತಮುತ್ತಲಿನ ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ನೂರಾರು ವಿದ್ಯಾರ್ಥಿಗಳ ಸಮವಸ್ತ್ರ, ಪುಸ್ತಕಗಳು, ಹಾಲ್‌ ಟಿಕೆಟ್‌ಗಳು ನಾಶವಾಗಿದ್ದು, ಅವರ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗಿದೆ. ಕಾಲೋನಿಯ ಎಲ್ಲ ನಿರಾಶ್ರಿತರಿಗೆ ಅಲ್ಲಿಂದ 5 ಕಿಲೋಮೀಟರ್‌ ವ್ಯಾಪ್ತಿಯಲ್ಲಿ ಪುನರ್ವಸತಿ ಅಥವಾ ಪರ್ಯಾಯ ವಸತಿ ಒದಗಿಸಬೇಕು. ಅದಕ್ಕಾಗಿ ಸಮೀಕ್ಷೆ ನಡೆಸಬೇಕು. ಹಲವು ವರ್ಷಗಳ ಕಾಲ ಶ್ರಮಿಸಿ ನಿರ್ಮಿಸಿರುವ ಮನೆಗಳನ್ನು ಕೆಡವಿರುವುದರಿಂದ ಪರಿಹಾರ ನೀಡಬೇಕು ಮತ್ತು ಗಾಯಗೊಂಡಿರುವವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು,” ಎಂದು ಅರ್ಜಿಯಲ್ಲಿಕೋರಲಾಗಿದೆ.

”ಸುಪ್ರೀಂಕೋರ್ಟ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮನೆಗಳನ್ನು ಕೆಡವಿರುವ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ, ಶಿಸ್ತು ಕ್ರಮ ಕೈಗೊಳ್ಳಬೇಕು. ನಷ್ಟ ಮತ್ತು ಹಾನಿಗೆ ಅಧಿಕಾರಿಗಳನ್ನು ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಬೇಕು. ಅಲ್ಲದೆ, ಸಂತ್ರಸ್ತರಾಗಿರುವ ಅಂಗವಿಕಲರು, ಮಹಿಳೆಯರು ಮತ್ತು ವೃದ್ಧರಿಗೆ ನಿತ್ಯ ಶುದ್ಧ ಕುಡಿಯುವ ನೀರು ಮತ್ತು ಮೂರು ಬಾರಿ ಪೌಷ್ಟಿಕ ಆಹಾರವನ್ನು ತಕ್ಷಣದಿಂದಲೇ ಒದಗಿಸಬೇಕು. ಪುರುಷರು ಮತ್ತು ಮಹಿಳೆಯರಿಗೆ ತಾತ್ಕಾಲಿಕವಾಗಿ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಬೇಕು. ನ್ಯಾಪ್ಕಿನ್‌ ಸೇರಿ ಅಗತ್ಯ ನೈರ್ಮಲ್ಯ ಸಾಮಗ್ರಿಗಳನ್ನು ಒದಗಿಸಬೇಕು. ಮಹಿಳೆಯರು ಮತ್ತು ಮಕ್ಕಳಿಗೆ ಭದ್ರತೆ ಒದಗಿಸಲು ಸಂಬಂಧಪಟ್ಟ ಅಕಾರಿಗಳಿಗೆ ನಿರ್ದೇಶನ ನೀಡಬೇಕು,” ಎಂದು ಮನವಿ ಮಾಡಲಾಗಿದೆ.

  • Related Posts

    ಮುಳ್ಳೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಸಂಭ್ರಮ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾಗಿ

    ಕೊಳ್ಳೇಗಾಲ: ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಮಹೋತ್ಸವವನ್ನು ಅತ್ಯಂತ ಸಡಗರ ಮತ್ತು ಗೌರವಪೂರ್ವಕವಾಗಿ ಆಚರಿಸಲಾಯಿತು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಜಂಟಿಯಾಗಿ ಕಾರ್ಯಕ್ರಮಕ್ಕೆ ಚಾಲನೆ…

    Continue reading
    ಶಾಸಕ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಹೊಸೂರು ಮುಖ್ಯರಸ್ತೆಯ ಕೊನಪ್ಪನ ಅಗ್ರಹಾರದಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯೂರು ಶಾಸಕ ಶ್ರೀ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿಯನ್ನು…

    Continue reading

    Leave a Reply

    Your email address will not be published. Required fields are marked *