ನವದೆಹಲಿ: ಕರ್ನಾಟಕದ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ರಸ್ತೆ ಯೋಜನೆಗಳ ಕುರಿತು ಮಹತ್ವದ ಚರ್ಚೆ ನಡೆಸಿದರು.
ಕೇಂದ್ರ ಸಚಿವರ ಅಧಿಕೃತ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ, ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
CRIF ಅನುದಾನ ಬಿಡುಗಡೆಗೆ ಮನವಿ
ರಾಜ್ಯದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳ ವೇಗ ಹೆಚ್ಚಿಸಲು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಬರಬೇಕಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆಗೊಳಿಸುವಂತೆ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಗಡ್ಕರಿ ಅವರು, ಅಗತ್ಯ ಪ್ರಕ್ರಿಯೆಗಳನ್ನು ಪೂರೈಸಿ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ರಾಜ್ಯ ಲೋಕೋಪಯೋಗಿ ಇಲಾಖೆಗೆ ಗಡ್ಕರಿ ಶ್ಲಾಘನೆ
ರಾಜ್ಯದಲ್ಲಿ ತಾಂತ್ರಿಕ ಕಾರಣಗಳಿಂದಾಗಿ ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ 48 ಪ್ರಮುಖ ಕಾಮಗಾರಿಗಳ ಪೈಕಿ 39 ಕಾಮಗಾರಿಗಳ ಸಮಸ್ಯೆಗಳನ್ನು ಸತೀಶ್ ಜಾರಕಿಹೊಳಿ ಅವರ ನೇತೃತ್ವದ ಇಲಾಖೆಯು ಯಶಸ್ವಿಯಾಗಿ ಬಗೆಹರಿಸಿದೆ. ರಾಜ್ಯ ಲೋಕೋಪಯೋಗಿ ಇಲಾಖೆಯ ಈ ಕ್ಷಿಪ್ರಗತಿಯ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ನಿತಿನ್ ಗಡ್ಕರಿ ಅವರು, ಇಲಾಖೆಯ ದಕ್ಷತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಕಾರಾತ್ಮಕ ಸ್ಪಂದನೆ
ರಾಜ್ಯದ ಸಮಗ್ರ ಪ್ರಗತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಹಕಾರದ ಅಗತ್ಯತೆಯನ್ನು ಸಚಿವರು ಒತ್ತಿಹೇಳಿದರು. ಸಭೆಯ ನಂತರ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, “ಕೇಂದ್ರ ಸಚಿವರು ರಾಜ್ಯದ ಮನವಿಗಳಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಬಾಕಿ ಇರುವ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು” ಎಂದು ತಿಳಿಸಿದರು.








