ಶ್ರೀರಂಗಪಟ್ಟಣ: ತಾಲೂಕಿನ ಮಹದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ (MVS)ಯ ಕಾರ್ಯಾಚರಣೆ ಹಾಗೂ ನಿರ್ವಹಣೆಯನ್ನು (O & M) ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್. ಅವರು ಇಂದು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮೀಣ ಭಾಗದ ಜನರಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನ ಪ್ರಮಾಣ ಮತ್ತು ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಈ ಭೇಟಿ ನೀಡಲಾಗಿತ್ತು.
ತಾಂತ್ರಿಕ ವಿಶ್ಲೇಷಣೆ: ನೀರು ಶುದ್ಧೀಕರಣ ಘಟಕ, ಪಂಪ್ ಹೌಸ್ ಹಾಗೂ ಪೈಪ್‌ಲೈನ್ ವ್ಯವಸ್ಥೆಯನ್ನು ವೀಕ್ಷಿಸಿದ ಸಿಇಒ ಅವರು, ದೈನಂದಿನ ನಿರ್ವಹಣಾ ಕಾರ್ಯಗಳ ಬಗ್ಗೆ ಎಂಜಿನಿಯರ್‌ಗಳಿಂದ ಸವಿಸ್ತಾರವಾದ ಮಾಹಿತಿ ಪಡೆದರು.
ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ: ಸಾರ್ವಜನಿಕರಿಗೆ ಯಾವುದೇ ಅಡಚಣೆಯಿಲ್ಲದೆ ಸಮರ್ಪಕವಾಗಿ ಶುದ್ಧ ನೀರು ತಲುಪಬೇಕು. ತಾಂತ್ರಿಕ ದೋಷಗಳು ಕಂಡುಬಂದಲ್ಲಿ ತಕ್ಷಣವೇ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ವರದಿ ಸಲ್ಲಿಕೆಗೆ ಆದೇಶ: ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಬಹುಗ್ರಾಮ ಯೋಜನೆಗಳ ನಿರ್ವಹಣಾ ಕಾರ್ಯಗಳನ್ನು ಪರೀಶಿಲಿಸಿ, ಕೂಡಲೇ ವರದಿ ಸಲ್ಲಿಸುವಂತೆ ಎಲ್ಲಾ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳಿಗೆ (AEE) ನಿರ್ದೇಶನ ನೀಡಿದರು.
ಸರ್ಕಾರದ ಆದ್ಯತೆ: “ಗ್ರಾಮೀಣ ಭಾಗದ ಪ್ರತಿ ಮನೆಗೂ ಸುರಕ್ಷಿತ ಕುಡಿಯುವ ನೀರು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಇದರಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು” ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಪರಿಶೀಲನಾ ಕಾರ್ಯದಲ್ಲಿ ಶ್ರೀರಂಗಪಟ್ಟಣ ತಾಲೂಕು ಪಂಚಾಯಿತಿ ಇಒ ಚಂದ್ರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಎಇಇ ಸೌಮ್ಯ, ಎಇ ಪ್ರತಾಪ್ ಹಾಗೂ ತಾಲೂಕಿನ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (PDO) ಮತ್ತು ಕುಡಿಯುವ ನೀರು ಯೋಜನೆಯ ಸಿಬ್ಬಂದಿಗಳು ಭಾಗವಹಿಸಿದ್ದರು.







