ಬೆಂಗಳೂರು: ನಾವು, ನೀವೆಲ್ಲ ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದೂ ಜನರ ತೆರಿಗೆ ಹಣದಿಂದಲೇ (Tax Money) ಅನ್ನೋದನ್ನ ಮರೆಯಬಾರದು. ಹಾಗಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ಅಂತಹ ಅಧಿಕಾರಿಗಳ ವಿರುದ್ಧ ನಿಷ್ಠೂರವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಓಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.
ಕಾನೂನು ಹಾಳುಮಾಡಿದ್ರೆ ಕ್ರಮ ಕೈಗೊಳ್ಳಿ:
ಸಂವಿಧಾನ ವಿರೋಧಿ, ಜನ ವಿರೋಧಿ ದುಷ್ಟ ಶಕ್ತಿಗಳು ಕೆಲವು ಕಡೆ ಬಾಲ ಬಿಚ್ಚುತ್ತಿವೆ. ಅವರು ಎಷ್ಟೇ ಪ್ರಭಾವಿ ಆಗಿರಲಿ, ಕಾನೂನು ಹಾಳು ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ ನಿಮ್ಮ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಇವೆರಡಕ್ಕೂ ನೇರಾ ನೇರಾ ಸಂಬಂಧವಿದೆ. ಹಾಗಾಗಿ ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳೇ ನೇರಹೊಣೆಯಾಗುತ್ತಾರೆ ಎಂದು ಖಡಕ್ ಎಚ್ಚರಿಕೆ ನೀಡಿದರು.
ಡಿಸಿ, ಸಿಇಓಗಳ ಪ್ರವಾಸ ಕಾರ್ಯಕ್ರಮ ಪ್ರಕಟಿಸಿ
ಮುಂದುವರಿದು ಮಾತನಾಡಿದ ಸಿಎಂ, ಜಿಲ್ಲಾಧಿಕಾರಿಗಳು, ಸಿಇಒಗಳು ತಮ್ಮ ಪ್ರವಾಸ ಕಾರ್ಯಕ್ರಮ ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು. ತಪಾಸಣಾ ವರದಿಯ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್‌ಗಳು, ವಸತಿ ಶಾಲೆಗಳು, ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ನನಗೆ ಬಂದಿದೆ. ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. ನೀವು ದಕ್ಷತೆಯಿಂದ ಕಾರ್ಯನಿರ್ವಹಿಸದಿದ್ದರೆ ಅಧೀನ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ಹೇಗೆ ನಿರೀಕ್ಷಿಸಬಹುದು? ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಆರೋಗ್ಯ, ಸಾರಿಗೆ ಸಂಚಾರದಂತಹ ಮೂಲಭೂತ ಸೌಕರ್ಯಗಳು ಲಭಿಸದಿದ್ದರೆ ಅದನ್ನು ಆಡಳಿತದ ವೈಫಲ್ಯವೆಂದೇ ಪರಿಗಣಿಸಬೇಕಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ಹಾಡಿಗಳಲ್ಲಿ ಶಾಲೆ, ರಸ್ತೆ, ಆಸ್ಪತ್ರೆಯಂತಹ ಮೂಲಸೌಲಭ್ಯ ಒದಗಿಸಲು ಇಂದಿಗೂ ಸರಿಯಾಗಿ ಯಾಕೆ ಸಾಧ್ಯವಾಗಿಲ್ಲ. ಅವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸರಿಯಾಗಿ ಹಕ್ಕು ಒದಗಿಸಲು ಯಾಕೆ ಸಾಧ್ಯವಾಗಿಲ್ಲ? ಜಿಲ್ಲಾಧಿಕಾರಿಗಳು, ಸಿಇಒಗಳು ಇಂತಹ ಹಾಡಿಗಳಿಗೆ ನಿರಂತರ ಭೇಟಿ ನೀಡಬೇಕು ಎಂದು ಸೂಚನೆ ನೀಡಿದರು.
ಎಲ್ಲಾ ಅಧಿಕಾರಿಗಳು ತಾಲೂಕು ಜಿಲ್ಲಾ ಕೇಂದ್ರಗಳಲ್ಲೇ ವಾಸವಿರಬೇಕು:
ಕೆಲವು ಜಿಲ್ಲಾಧಿಕಾರಿಗಳು, ಸಿಇಒಗಳು ಸರಿಯಾಗಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗದಿರುವ ಬಗ್ಗೆ ದೂರುಗಳು ಬಂದಿವೆ. ಸಾರ್ವಜನಿಕ ಭೇಟಿಯ ಅವಧಿಯನ್ನು ಮೊದಲೇ ಪ್ರಕಟಿಸಬೇಕು. ಶೋಷಿತರು, ಬಡವರು, ಜನಸಾಮಾನ್ಯರು ಸಾಮಾನ್ಯವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಬರುತ್ತಾರೆ. ಅಂತವರ ಸಂಕಷ್ಟಗಳನ್ನು ನೀವೇ ಆಲಿಸದಿದ್ದರೆ ಅದನ್ನು ಬಗೆಹರಿಸುವವರು ಯಾರು? ಯಾರ ಬಳಿ ಅವರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಬೇಕು? ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ವಾಸವಿರಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ಜನರಿಗೆ ಲಭ್ಯವಿರಬೇಕು. ಇದನ್ನು ಜಿಲ್ಲಾಧಿಕಾರಿಗಳು ಖಾತ್ರಿಪಡಿಸಬೇಕು. ಕೇಂದ್ರ ಸ್ಥಾನದಲ್ಲಿರದ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ನನಗೆ ವರದಿ ನೀಡಬೇಕು ಎಂದು ತಾಕೀತು ಮಾಡಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಕನಿಷ್ಟ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಬೇಕು. ಅದರೊಂದಿಗೆ ಶಾಲೆ, ಹಾಸ್ಟೆಲ್, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವರದಿಯನ್ನು ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು ಎಂದು ಎಚ್ಚರಿಸಿದರು.









