ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ನಡೆಯುತ್ತಿರುವ ಟಿಪ್ಪರ್ ವಾಹನಗಳ ಅತಿಯಾದ ಸಂಚಾರ ಹಾಗೂ ಹೋಂಸ್ಟೇ, ರೆಸಾರ್ಟ್‌ಗಳ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ಗುಂಡ್ಲುಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಹತ್ವದ ಅಧಿಕಾರಿಗಳ ಸಭೆ ನಡೆಯಿತು.
ಬಂಡೀಪುರ ಅಭಯಾರಣ್ಯದ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಜಿಲ್ಲಾಧಿಕಾರಿಗಳು ಹೆಚ್ಚಿನ ಒತ್ತು ನೀಡಿದರು.
ಟಿಪ್ಪರ್ ವಾಹನಗಳ ನಿಯಂತ್ರಣ: ಮೈನ್ಸ್ (ಗಣಿ ಮತ್ತು ಭೂವಿಜ್ಞಾನ) ಹಾಗೂ ಆರ್‌ಟಿಒ (ಸಾರಿಗೆ) ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಅತಿಭಾರ (Overload) ಸಾಗಿಸುವ ಟಿಪ್ಪರ್ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರಾತ್ರಿ ವೇಳೆಯಲ್ಲಿ ಟಿಪ್ಪರ್ ವಾಹನಗಳ ಓಡಾಟವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲು ಸೂಚಿಸಲಾಯಿತು.
ಹೆಚ್ಚುವರಿ ಚೆಕ್‌ಪೋಸ್ಟ್ ಸ್ಥಾಪನೆ: ಅಕ್ರಮ ಸಾಗಾಣಿಕೆ ತಡೆಯಲು ಅಗತ್ಯವಿರುವ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚುವರಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಅಚಾನಕ್ ಪರಿಶೀಲನೆ: ನಿಯಮ ಉಲ್ಲಂಘಿಸುವ ವಾಹನಗಳು ಹಾಗೂ ರೆಸಾರ್ಟ್‌ಗಳ ಮೇಲೆ ಯಾವುದೇ ಮುನ್ಸೂಚನೆ ಇಲ್ಲದೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಹೋಂಸ್ಟೇ ಹಾಗೂ ರೆಸಾರ್ಟ್ ನಿಯಮಾವಳಿ: ಪರಿಸರ ಸೂಕ್ಷ್ಮ ವಲಯದಲ್ಲಿರುವ ಹೋಂಸ್ಟೇ ಮತ್ತು ರೆಸಾರ್ಟ್‌ಗಳು ಸರ್ಕಾರದ ನಿಯಮಗಳನ್ನು ಪಾಲಿಸುತ್ತಿವೆಯೇ ಎಂಬ ಬಗ್ಗೆ ನಿಗಾ ವಹಿಸಲು ಸೂಚಿಸಲಾಯಿತು.
ಈ ಸಭೆಯಲ್ಲಿ ಬಂಡೀಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಗುಂಡ್ಲುಪೇಟೆ ತಹಶೀಲ್ದಾರ್ ತನ್ಮಯ್, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.







