ಮಂಡ್ಯ: ತಾಲ್ಲೂಕಿನ ಕೊತ್ತತ್ತಿ ಹೋಬಳಿ ತೂಬಿನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆರೆಕಟ್ಟೆಗಳಿಗೆ ಲೋಕಪಾವನಿ ನದಿಯಿಂದ ನೀರು ತುಂಬಿಸುವ ಐತಿಹಾಸಿಕ ಕಾರ್ಯಕ್ಕೆ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಹಮ್ಮಿಕೊಳ್ಳಲಾಗಿದ್ದ ಹೃತೂರ್ವಕ ಗೌರವ ಸಮರ್ಪಣಾ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಪಾಲ್ಗೊಂಡರು.
ಈ ಸಮಾರಂಭವು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಹಾಗೂ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಅದ್ದೂರಿಯಾಗಿ ನೆರವೇರಿತು.
ರೈತರ ಹಿತವೇ ಮೊದಲು – ಸಚಿವ ಚಲುವರಾಯಸ್ವಾಮಿ: ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎನ್. ಚಲುವರಾಯಸ್ವಾಮಿ ಅವರು, “ಎಲೆಚಾಕನಹಳ್ಳಿ ಏತನೀರಾವರಿ ಯೋಜನೆ ಮೂಲಕ ತೂಬಿನಕೆರೆ ಸುತ್ತಮುತ್ತಲಿನ ಗ್ರಾಮಗಳ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಮಹತ್ವದ ಕೆಲಸ ಮಾಡಿದ ಬಸವರಾಜ ಬೊಮ್ಮಾಯಿ ಅವರ ಶ್ರಮ ಶ್ಲಾಘನೀಯ. ರೈತರ ಕಲ್ಯಾಣ ಮತ್ತು ಜನತೆಯ ಅಭ್ಯುದಯಕ್ಕಾಗಿ ರಾಜಕೀಯವನ್ನು ಮೀರಿ ಶ್ರಮಿಸುವವರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ,” ಎಂದು ತಿಳಿಸಿದರು.
ಮುಂದುವರಿದು, ಜಿಲ್ಲೆಯ ಕೃಷಿ ಮತ್ತು ನೀರಾವರಿ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಗಣ್ಯರ ಉಪಸ್ಥಿತಿ: ಕಾರ್ಯಕ್ರಮದಲ್ಲಿ ಶಾಸಕರಾದ ಎ.ಬಿ. ರಮೇಶ ಬಂಡಿಸಿದ್ದೇಗೌಡ, ಮಾಜಿ ಶಾಸಕರಾದ ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ, ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ್, ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ. ಜಯಪ್ರಕಾಶ್ ಗೌಡ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಸಾವಿರಾರು ರೈತರು ಉಪಸ್ಥಿತರಿದ್ದರು.







