ಚಿತ್ರದುರ್ಗ: ದಣಿವರಿಯದ ಧೀಮಂತ ಜನನಾಯಕ, ರೈತಬಂಧು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜಕಾರಣದಲ್ಲಿ 50 ಸಾರ್ಥಕ ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಮೇ 9 ರಂದು ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ಬೃಹತ್ ‘ಆತ್ಮೀಯ ಅಭಿಮಾನೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಐತಿಹಾಸಿಕ ಸಮಾರಂಭದ ವೇದಿಕೆ ನಿರ್ಮಾಣ ಕಾಮಗಾರಿಗೆ ಇಂದು ಸಾಂಪ್ರದಾಯಿಕವಾಗಿ ಭೂಮಿಪೂಜೆ ನೆರವೇರಿಸಲಾಯಿತು.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಭೂಮಿಪೂಜೆ ಕಾರ್ಯಕ್ರಮವು ಪರಮಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು, ಸಂತರು ಮತ್ತು ಶರಣರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.
ಗಣ್ಯರ ಸಮಾಗಮ: ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಸಂಸದರಾದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಮಾಜಿ ಸಂಸದರಾದ ಜಿ.ಎಂ. ಸಿದ್ದೇಶ್ವರ್, ಎ. ನಾರಾಯಣಸ್ವಾಮಿ ಸೇರಿದಂತೆ ಹಲವು ಶಾಸಕರು, ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ಪ್ರಮುಖ ಮುಖಂಡರು ಭಾಗವಹಿಸಿದ್ದರು.
ಸಹಸ್ರಾರು ಕಾರ್ಯಕರ್ತರ ಭಾಗಿ: ಭೂಮಿಪೂಜೆ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಂಡು ಸಂಭ್ರಮಿಸಿದರು. ಯಡಿಯೂರಪ್ಪನವರ ಅರ್ಧ ಶತಮಾನದ ರಾಜಕೀಯ ಜೀವನವನ್ನು ಗೌರವಿಸುವ ಈ ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.






